ಮಹಾತ್ಮ ಗಾಂಧೀಜಿ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02(ಕರ್ನಾಟಕ ವಾರ್ತೆ):- ಪ್ರತಿಯೊಬ್ಬರು ಗಾಂಧೀಜಿ ಅವರ ಸತ್ಯ, ಅಹಿಂಸೆ ಮುಂತಾದ ತತ್ವಾದರ್ಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜಯಂತಿಯ ಅಂಗವಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು, ಅಹಿಂಸೆ , ಅಸಹಕಾರ ಚಳವಳಿಯಿಂದಲೇ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು. ಪ್ರತಿವರ್ಷ ಅಕ್ಟೋಬರ್‌ 2 ರಂದು ದೇಶದ ಜನ ರಾಷ್ಟ್ರಪಿತ ಮಹಾತ್ಮ ಗಾಂ​ಧೀಜಿಯವರ ಗುಣಗಾನ ಮಾಡುತ್ತಾರೆ. ಹಾಗೇ ಮತ್ತೊಬ್ಬ ಶ್ರೇಷ್ಠ ಮುತ್ಸದ್ಧಿ, ಮಾಜಿ ಪ್ರಧಾನಿ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿಯವರನ್ನೂ ನೆನೆಯುತ್ತಾರೆ. ಶಾಸ್ತ್ರೀಜಿ ಈ ದೇಶ ಕಂಡ ಅಪ್ರತಿಮ ನಾಯಕ. ‘ಜೈ ಜವಾನ್ ಜೈ ಕಿಸಾನ್’ ಎನ್ನುವ ಮಹೋನ್ನತ ಮಂತ್ರ ಘೋಷಿಸಿದವರು. ಸಜ್ಜನ ನೇತಾರ ಎಂದು ಸ್ಮರಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನಡೆಸಿದ್ದ ಮಹಾತ್ಮ ಗಾಂಧೀಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು.
ದೇವನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ ಅವರು ಮಹಾತ್ಮ ಗಾಂಧೀಜಿ ಅವರ ಜೀವನಚರಿತ್ರೆ, ಹೋರಾಟ, ತತ್ವಗಳ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಗಾಂಧಿ ಪ್ರಿಯಭಜನೆಗಳನ್ನು ಹಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ. ಉಪ ನಿರ್ದೇಶಕಿ ಸಿ. ರೂಪಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *